Home ನಿಮ್ಮ ಜಿಲ್ಲೆ ಬೀದರ SSLC ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಿ: ಗೀತಾ ಚಿದ್ರಿ

SSLC ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಿ: ಗೀತಾ ಚಿದ್ರಿ

ಬೀದರ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶ ಸುಧಾರಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಾ ಪಂಡಿತರಾವ್ ಚಿದ್ರಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜ.13ರಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಮಾಸಿಕ ಕೆಡಿಪಿ) ಡಿಸೆಂಬರ್ ತಿಂಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಕಳೆದ ಸಾಲಿನಲ್ಲಿ ಶೇ.40ಕ್ಕಿಂತ ಕಡಿಮೆ ಫಲಿತಾಂಶ ದಾಖಲಾದ ಶಾಲೆಗಳಲ್ಲಿ ತೀವ್ರ ನಿಗಾ ಕಲಿಕಾ ಘಟಕಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಹೆಚ್ಚು ಅನುತ್ತೀರ್ಣವಾಗುವ ವಿಷಯಗಳಿಗೆ ಒತ್ತು ನೀಡಲಾಗುತ್ತಿದೆ. ವೇಳಾಪಟ್ಟಿಯನ್ನು ನಿಗದಿಪಡಿಸಿ, ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಹೆಚ್.ಸಿ.ಚಂದ್ರಶೇಖರ್ ಅವರು ಮಾಹಿತಿ ನೀಡಿದರು.
ಹೆಚ್ಚುವರಿ ತರಗತಿಗಳು ಸರಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಕಾಲಕಾಲಕ್ಕೆ ಪರೀಕ್ಷೆಗಳನ್ನು ನಡೆಸಿ, ಮಕ್ಕಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಬೇಕು. ತೀವ್ರ ನಿಗಾ ಕಲಿಕಾ ಘಟಕಗಳಿರುವ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಅಧ್ಯಕ್ಷರು ನಿರ್ದೇಶನ ನೀಡಿದರು.
ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ, ಜಿಲ್ಲೆಯಲ್ಲಿರುವ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಸಬೇಕು. ಕಮಲನಗರ, ಹೊಳಸಮುದ್ರ ಆಸ್ಪತ್ರೆಗಳಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಪ್ರಸೂತಿ ಮಹಿಳೆಯರಿಗೆ ಸಿಗಬೇಕಾದ ಸೌಲಭ್ಯಗಳನ್ನು ವಿತರಿಸುತ್ತಿಲ್ಲ ಎನ್ನುವ ದೂರುಗಳು ಬಂದಿವೆ. ಈ ಬಗ್ಗೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಇಲಾಖೆಗೆ ಬಿಡುಗಡೆಯಾಗಿರುವ ಎಲ್ಲ ಅನುದಾನ ಖರ್ಚಾಗುವಂತೆ ನೋಡಿಕೊಳ್ಳಬೇಕು. ಬಾಕಿ ಉಳಿದಿರುವ ಎಲ್ಲ ಅಭಿವೃದ್ಧಿ ಕೆಲಸಗಳನ್ನು ಶೀಘ್ರ ಪೂರ್ಣಗೊಳಿಸಿ, ಯಾವುದೇ ಕಾರಣಕ್ಕೂ ಹಣ ವಾಪಸ್ಸಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಆಹಾರ ವಿತರಣೆ ಹಾಗೂ ಇನ್ನಿತರೆ ಸೌಕರ್ಯಗಳನ್ನು ಕಲ್ಪಿಸಲು ಸಮಿತಿಗಳನ್ನು ನೇಮಿಸಬೇಕು ಎಂಬ ನಿಯಮವಿದೆ. ಬೀದರ ಜಿಲ್ಲೆಯಲ್ಲಿ ಸಮಿತಿಗಳನ್ನು ರಚಿಸಲಾಗಿದೆಯೇ ಎನ್ನುವ ಬಗ್ಗೆ ಪರಿಶೀಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.
ಔರಾದ್ ತಾಲೂಕಿನ ಕೆಲವು ವಸತಿ ನಿಲಯಗಳಲ್ಲಿ ನಿಲಯ ಪಾಲಕರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ ಎನ್ನುವ ದೂರುಗಳು ಬಂದಿವೆ. ಈ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿºಸುತ್ತಿರುವ ನೌಕರರಿಗೆ ವೇತನ ಸಮಯಕ್ಕೆ ಸಿಗಲು ರಾಜ್ಯ ವಲಯದಿಂದ ಅನುದಾನ ಬಿಡುಗಡೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಲಕ್ಷ್ಮಿಣರಾವ ಬುಳ್ಳಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗ್ಯಾನೇಂದ್ರಕುಮಾರ ಗಂಗವಾರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…